ಮಾಧ್ಯಮಗಳು ಸತ್ಯವನ್ನು ಮರೆಮಾಚುವ ಕೆಲಸ ಮಾಡಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, : ಮಾಧ್ಯಮಗಳು ವಸ್ತುಸ್ಥಿತಿಯನ್ನು ಜನರ ಮುಂದೆ ಇಡಬೇಕೇ ವಿನಃ, ಸತ್ಯವನ್ನು ಮರೆಮಾಚುವ ಕೆಲಸ ಮಾಡಬಾರದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುಲೋಚನಾ ಸಭಾಂಗಣದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ಪತ್ರಿಕಾ ದಿನಾಚರಣೆ 2025, ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆ ಉದ್ಘಾಟಿಸಿ ಮಾತನಾಡಿದರು.
ಮಾಧ್ಯಮಗಳು ದೀನ, ದಮನಿತರ ದನಿಯಾಗಿ ಕೆಲಸ ಮಾಡಬೇಕು. ಸಂವಿಧಾನಶಿಲ್ಪಿ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ನ್ಯಾಯ, ಸಮಾನತೆ ಎತ್ತಿಹಿಡಿದಿದ್ದರು. ಮಾಧ್ಯಮಗಳು ಸಹಿತ ಮೌಲ್ಯಗಳನ್ನು ಉಳಿಸಿ ಜನಪರ ದನಿಯಾಗಬೇಕು ಎಂದರು.
ನಮಗೆ ಈ ಕ್ಷಣ ಅಗತ್ಯವಿರುವುದು ಜಾತಿ ರಹಿತ, ಮಾನವೀಯ ಮೌಲ್ಯಗಳುಳ್ಳ ಸಮಾಜ. ಆದರೂ ಕೆಲವರು ದ್ವೇಷ, ಅಸಹನೆಯಿಂದ ಸಮಾಜದ ಸ್ವಾಸ್ಥ್ಯವನ್ನು ನಾಶಪಡಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ನಾವು ಯಾವುದೇ ಆಸ್ಪದ ನೀಡಬಾರದು. ಇತ್ತೀಚೆಗೆ ಸುಳ್ಳು ಸುದ್ದಿಗಳು ಮಾಧ್ಯಮಗಳಲ್ಲಿ ರಾರಾಜಿಸುತ್ತಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಲ್ಕನೇ ಅಂಗ ಎನಿಸಿರುವ ಪತ್ರಿಕಾರಂಗಕ್ಕೆ ಬಹಳಷ್ಟು ಜವಾಬ್ದಾರಿಗಳಿವೆ. ಕಾಸಿಗಾಗಿ ಸುದ್ದಿ, ಸುಳ್ಳು ಸುದ್ದಿಗೆ ಮಾಧ್ಯಮಗಳು ಕಡಿವಾಣ ಹಾಕುವುದು ಮುಖ್ಯ. ಪತ್ರಿಕಾ ಸ್ವಾತಂತ್ರ್ಯವನ್ನು ಉತ್ತಮವಾಗಿ ಬಳಸಿಕೊಂಡ ಒಟ್ಟು 180 ದೇಶಗಳ ಪೈಕಿ ಭಾರತ 151 ನೇ ಸ್ಥಾನದಲ್ಲಿದೆ. ಇದು ಉತ್ತಮ ಬೆಳವಣಿಗೆಯಲ್ಲ. ಮಾಧ್ಯಮದವರಾಗಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ, ತಮ್ಮ ಕೆಲಸವನ್ನು ಆತ್ಮಾವಲೋಕನ ಮಾಡಬೇಕು. ಮೌಢ್ಯವನ್ನು ತೊಡೆದು ಹಾಕಿ ವೈಚಾರಿಕತೆ ಬೆಳೆಸಿಕೊಳ್ಳಬೇಕು. ಸುಳ್ಳು ಸುದ್ದಿ ನಿಯಂತ್ರಣಕ್ಕೆ ಸರ್ಕಾರ ಸದ್ಯದಲ್ಲೇ ಕಾಯ್ದೆ ತರಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ಬಿ.ಬಿ. ಕಾವೇರಿ, ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್, ಕಂಠೀರವ ಸ್ಟುಡಿಯೋ ಅಧ್ಯಕ್ಷರಾದ ಮೊಹಬೂಬ್ ಪಾಷಾ, ಕರ್ನಾಟಕ ಪತ್ರಕರ್ತೆಯರ ಸಂಘ ಅಧ್ಯಕ್ಷರಾದ ಶ್ರೀಮತಿ ಪದ್ಮಾ ಶಿವಮೊಗ್ಗ, ಕರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಸಹನಾ .ಎಂ ಸೇರಿದಂತೆ ಹಿರಿಯ ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

