I ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ಆಗ್ರಹಿಸಿ I ಸಂಸದರಾದ ಬಿ.ವೈ. ರಾಘವೇಂದ್ರ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ I ಶಿವಮೊಗ್ಗ ಜಿಲ್ಲಾ ವಕೀಲರ ಸಂಘ I
ಬೆಂಗಳೂರು : ಮಲೆನಾಡು ಮತ್ತು ಮಧ್ಯ ಕರ್ನಾಟಕ ಭಾಗದ ಸಾರ್ವಜನಿಕರ ಹಾಗೂ ಸಮಗ್ರ ಕಾನೂನು ವಲಯದ ದೀರ್ಘಕಾಲದ ಆಕಾಂಕ್ಷೆಯಾಗಿರುವ ಶಿವಮೊಗ್ಗದಲ್ಲಿ ಉಚ್ಚ ನ್ಯಾಯಾಲಯದ (High Court) ಸರ್ಕ್ಯೂಟ್ ಪೀಠ ಸ್ಥಾಪನೆಗೆ ಆಗ್ರಹಿಸಿ, ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರನ್ನು ಸಂಸದರಾದ ಬಿ.ವೈ. ರಾಘವೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾ ವಕೀಲರ ಸಂಘದಿಂದ ಭೇಟಿಯಾಗಿ, ಅಧಿಕೃತ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಶಿವಮೊಗ್ಗ ಜಿಲ್ಲೆ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು ನ್ಯಾಯದಾನಕ್ಕಾಗಿ ಬೆಂಗಳೂರಿಗೆ ಅಲೆಯುವ ಸಂಕಷ್ಟವನ್ನು ತಪ್ಪಿಸಲು ಮತ್ತು ಈ ಭಾಗದ ನ್ಯಾಯಾಂಗ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಶಿವಮೊಗ್ಗದಲ್ಲಿ ಸರ್ಕ್ಯೂಟ್ ಪೀಠದ ಸ್ಥಾಪನೆ ಅತ್ಯಂತ ಅನಿವಾರ್ಯವಾಗಿದೆ. ಈ ನ್ಯಾಯಯುತ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಲಾಯಿತು.
ಈ ಭೇಟಿಯ ವೇಳೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್ ಚೆನ್ನಬಸಪ್ಪ (ಚೆನ್ನಿ), ವಿಧಾನ ಪರಿಷತ್ ಸದಸ್ಯರುಗಳಾದ ಡಿ.ಎಸ್. ಅರುಣ್, ಡಾ. ಧನಂಜಯ್ ಸರ್ಜಿ, ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಶಿವಮೊಗ್ಗ ವಕೀಲರ ಸಂಘದ ಅಧ್ಯಕ್ಷರಾದ ಜಿ. ಆರ್. ರಾಘವೇಂದ್ರ ಸ್ವಾಮಿ, ಸಾಗರ ವಕೀಲರ ಸಂಘದ ಅಧ್ಯಕ್ಷರಾದ ಎಂ.ಬಿ. ಗಿರೀಶ್ ಗೌಡ, ಶಿಕಾರಿಪುರ ವಕೀಲರ ಸಂಘದ ಅಧ್ಯಕ್ಷರಾದ ಎಂ.ಜಿ. ಉಮೇಶ್ ಸೇರಿದಂತೆ ಶಿವಮೊಗ್ಗ ಜಿಲ್ಲೆಯ ಹಿರಿಯ ನ್ಯಾಯವಾದಿಗಳು ಹಾಗೂ ವಿವಿಧ ವಕೀಲರ ಸಂಘದ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.


